
ಪಟ್ಟಣದ 15 ವಾರ್ಡುಗಳಲ್ಲಿ 19 ಬ್ಲಾಕ್‌ಗಳನ್ನು ರೂಪಿಸಿ ಸಮರ್ಪಕವಾಗಿ ಜನಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಶೇ. 80 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ಹೆಚ್ ತಿಳಿಸಿದ್ದಾರೆ.
ಪಟ್ಟಣದಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯವನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿ, ಏಪ್ರಿಲ್ 15ರಿಂದ ಆರಂಭವಾದ ಈ ಮಹತ್ವದ ಕಾರ್ಯ ಮೇ 15ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು. ಜನಗಣತಿ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಜನತೆ ಸ್ವಯಂ ಪ್ರೇರಿತರಾಗಿ ಅಗತ್ಯ ಮಾಹಿತಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.
ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಈ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಪ್ರತಿಯೊಬ್ಬರ ಮಾಹಿತಿಯನ್ನೂ ಅತ್ಯಂತ ಗೌಪ್ಯತೆಯಿಂದ ಸಂಗ್ರಹಿಸಲಾಗುತ್ತಿದ್ದು, ಯಾವುದೇ ರೀತಿಯ ದುರುಪಯೋಗವಾಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಜನಗಣತಿ ಮೂಲಕ ಪಟ್ಟಣದ ಜನಸಂಖ್ಯೆ, ಆರ್ಥಿಕ, ಸಾಮಾಜಿಕ ಹಾಗೂ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ಕುರಿತು ನಿಖರ ಮಾಹಿತಿ ದೊರೆಯಲಿದ್ದು, ಮುಂದಿನ ಯೋಜನೆಗಳ ರೂಪುರೇಷೆ ಸಿದ್ಧಪಡಿಸಲು ಇದು ನೆರವಾಗಲಿದೆ ಎಂದರು.
ಜನಗಣತಿ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳ್ಳಲು ಸಿಬ್ಬಂದಿಗಳು ಹಾಗೂ ಶಿಕ್ಷಕರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಮನೆಮನೆಗೆ ಭೇಟಿ ನೀಡಿ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಉಳಿದಿರುವ ಮನೆಗಳಿಗೂ ಶೀಘ್ರದಲ್ಲೇ ಭೇಟಿ ನೀಡಿ ಕಾರ್ಯವನ್ನು ಸಮಯಕ್ಕೆ ಮುಗಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುಮಾ ಕಂಚಿ, ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.