ಯಲಬುರ್ಗಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಗಾಣಿಗ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದೇ ಇರುವುದು ಸಮುದಾಯಕ್ಕೆ ತೀವ್ರ ನಿರಾಸೆ ಉಂಟುಮಾಡಿದೆ ಎಂದು ಗಾಣಿಗ ಸಮಾಜದ ಅಧ್ಯಕ್ಷ ಶರಣಪ್ಪ ರ್ಯಾವಣಕಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಣಿಗ ಸಮುದಾಯವು ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರಂತರ ಬೆಂಬಲ ನೀಡುತ್ತಾ ಬಂದಿದೆ. ಆದಾಗ್ಯೂ, ಪಕ್ಷದ ಸಂಘಟನೆ ಹಾಗೂ ಚುನಾವಣಾ ಯಶಸ್ಸಿಗೆ ಮಹತ್ವದ ಕೊಡುಗೆ ನೀಡಿರುವ ಸಮುದಾಯದ ಜನಪ್ರತಿನಿಧಿಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.
ಪ್ರಸ್ತುತ ಕಾಂಗ್ರೆಸ್ ಪಕ್ಷದಿಂದ ಲಕ್ಷ್ಮಣ ಸವದಿ, ಬಿ.ಕೆ. ಸಂಗಮೇಶ್ವರ ಹಾಗೂ ವಿರೇಂದ್ರ ಪಪ್ಪಿ ಅವರು ಶಾಸಕರಾಗಿ ಆಯ್ಕೆಯಾಗಿದ್ದು, ಜನರ ಪರವಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಹಿರಿಯ ಮತ್ತು ಅನುಭವೀ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಲಕ್ಷ್ಮಣ ಸವದಿ ಅವರು ಹಲವು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಉಪ ಮುಖ್ಯಮಂತ್ರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಸೋತಾಗಲೂ ಬಿಜೆಪಿ ಪಕ್ಷವು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಗೌರವಿಸಿತ್ತು. ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದು, ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೂ ಇದುವರೆಗೆ ಅವರಿಗೆ ಸಚಿವ ಸ್ಥಾನ ನೀಡದಿರುವುದು ಸಮುದಾಯದ ನೋವಿಗೆ ಕಾರಣವಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಅವರು ಸಮುದಾಯದ ಭಾವನೆಗಳನ್ನು ಅರ್ಥಮಾಡಿಕೊಂಡು ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಗಾಣಿಗ ಸಮುದಾಯಕ್ಕೆ ಸೂಕ್ತ ಗೌರವ ನೀಡಬೇಕು. ಇಲ್ಲವಾದಲ್ಲಿ ಸಮುದಾಯದ ಮುಖಂಡರು ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ಸಭೆ ನಡೆಸಿ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗಾಣಿಗ ಸಮಾಜದ ಪ್ರಧಾನ ಕಾರ್ಯದರ್ಶಿ ಹಿರೇಹನುಮಪ್ಪ ಬೊಮ್ಮನಾಳ ಮಾತನಾಡಿ, ರಾಜ್ಯದ ಅಭಿವೃದ್ಧಿಯಲ್ಲಿ ಗಾಣಿಗ ಸಮುದಾಯದ ಕೊಡುಗೆ ಮಹತ್ವದ್ದಾಗಿದ್ದು, ರಾಜಕೀಯ ಕ್ಷೇತ್ರದಲ್ಲಿಯೂ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ದೊರೆಯಬೇಕು. ಸಚಿವ ಸಂಪುಟದಲ್ಲಿ ಸಮುದಾಯದ ಒಬ್ಬ ಪ್ರತಿನಿಧಿಗೆ ಅವಕಾಶ ಕಲ್ಪಿಸುವ ಮೂಲಕ ಸರ್ಕಾರ ಸಾಮಾಜಿಕ ನ್ಯಾಯದ ಬದ್ಧತೆಯನ್ನು ತೋರಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನಾಗರಾಜ ನವಲಹಳ್ಳಿ, ಬಾಳೆಶಪ್ಪ ಹಳ್ಳಿ, ಮಹಾಂತೇಶ ಗಾಣಿಗೇರ, ಆದೇಶ ರೊಟ್ಟಿ, ಮಂಜುನಾಥ ರೊಟ್ಟಿ, ಹನುಮಂತ ಚರಾರಿ, ಪಂಪಾಪತಿ ವಣಗೇರಿ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
