ಕೊಪ್ಪಳ: ಕೂಸು ಹುಟ್ಟುವ ಮುಂಚೆಯೇ ಕುಲಾಯಿ ಹೋಲಿಸಿದ್ರು ಎನ್ನುವ ಗಾದೆಯ ಮಾತಿನ ಹಾಗೇ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ಸಚಿವ ಸ್ಥಾನ ಸಿಗುವ ಮುನ್ನವೇ ಖಾತೆಗಾಗಿ ಖ್ಯಾತೆ ತೆಗೆದಿದ್ದಾರೆಂದು ಕಾಂಗ್ರೆಸ್ ವಲಯದಲ್ಲಿ ಬಾರಿ ಚರ್ಚೆ ನಡೆದಿದೆ.
ರಾಜ್ಯದಲ್ಲಿ ಬದಲಾಣೆಯಿಂದಾಗಿ ಈಗಾಗಲೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಜೊತೆಗೆ 12 ಜನ ಶಾಸಕರು ಮೊದಲ ಪಟ್ಟಿಯಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೊದಲ ಪಟ್ಟಿಯಲ್ಲಿ ಕೊಪ್ಪಳ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.
ಜಿಲ್ಲೆಯ ಕನಕಗಿರಿ ಕ್ಷೇತ್ರದ ನಿರ್ಗಮಿತ ಸಚಿವ ಶಿವರಾಜ ತಂಗಡಗಿ ಹಾಗೂ ಕೊಪ್ಪಳ ಕ್ಷೇತ್ರದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಈಗಾಗಲೇ ದೆಹಲಿ ಹಾಗೂ ಬೆಂಗಳೂರಿನಲ್ಲಿ ಬಿಡು ಬಿಟ್ಟು ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಹರ ಸಾಹಸ ಪಡುತ್ತಿರುವ ಮಧ್ಯದಲ್ಲಿ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ಹಿರಿತನ ಹಾಗೂ ಅನುಭವದ ಮೇಲೆ ಸಚಿವ ಸ್ಥಾನ ನೀಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಖ್ಯಾತೆ: ಶಾಸಕ ಬಸವರಾಜ ರಾಯರೆಡ್ಡಿಯವರು ತಾವು ಕೇಳುವ ಹಾಗೂ ಕ್ಯಾಬಿನೆಟ್ ದರ್ಜೆಯ ಖಾತೆ ನೀಡಬೇಕೆಂದು ಪಟ್ಟು ಹಿಡಿಯುವ ಮೂಲಕ ಖ್ಯಾತೆ ತೆಗೆದಿದ್ದಾರೆ ಎಂದು ಹೇಳಲಾಗುತ್ತಿದೆ.
ದುಂಬಾಲು: ಕೊಪ್ಪಳ ಕ್ಷೇತ್ರದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಜಿಲ್ಲೆಯಲ್ಲಿ ಸೋಲಿಲ್ಲದ ಸರ್ದಾರ್ ನಂತೆ ಸತತ ಮೂರು ಬಾರಿ ಗೆಲುವು ಸಾಧಿಸುವ ಮೂಲಕ ಜನ ಮನ್ನಣೆ ಗಳಿಸಿದ್ದಾರೆ. ರಾಘವೇಂದ್ರ ಹಿಟ್ನಾಳ ತಂದೆ ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಅವರು ತಮ್ಮ ಪುತ್ರನಿಗೆ ಹೇಗಾದರೂ ಮಾಡಿ ಸಚಿವ ಸ್ಥಾನ ಕೊಡಿಸಬೇಕೆಂಬ ಹಠದಿಂದ ದೆಹಲಿ ಹಾಗೂ ಬೆಂಗಳೂರಿನಲ್ಲಿ ಬಿಡು ಬಿಟ್ಟು ಹೈ ಕಮಾಂಡ್ ದುಂಬಾಲು ಬಿದ್ದಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
